23.9 C
Hubli
ಮಾರ್ಚ್ 31, 2023
eNews Land
ರಾಜ್ಯ

ಹಿಂದುಳಿಗ ವರ್ಗಗಳ ರಾಜಕೀಯ ಮೀಸಲಾತಿಗಾಗಿ ಎಲ್ಲ ಕಾನೂನಾತ್ಮಕ ಪ್ರಯತ್ನ : ಮುಖ್ಯಮಂತ್ರಿ ಬೊಮ್ಮಾಯಿ

Listen to this article

ಇಎನ್ಎಲ್ ಬೆಂಗಳೂರು

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಒದಗಿಸಲು ಕಾನೂನಾತ್ಮಕವಾಗಿ ಎಲ್ಲ ಪ್ರಯತ್ನಗಳನ್ನು ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ಆರ್.ಟಿ.ನಗರದ ನಿವಾಸದ ಬಳಿ ಮಾಧ್ಯಮದವರಿಗೆ ಈ ವಿಷಯ ತಿಳಿಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಪಟ್ಟಂತೆ ಕಾನೂನು ಸಚಿವರು , ಅಡ್ವೊಕೇಟ್ ಜನರಲ್ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸುಪ್ರೀಂ ಕೋರ್ಟ್‍ನ ಎರಡು ತೀರ್ಪುಗಳ ಸಂಪೂರ್ಣ ವಿಶ್ಲೇಷಣೆ ಮಾಡಲಾಗುತ್ತಿದೆ. ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ನೀಡಲು ಆಯೋಗವನ್ನು ರಚಿಸಲಾಗಿದೆ. ವಿರೋಧಪಕ್ಷದ ನಾಯಕರು ಈ ಬಗ್ಗೆ ಪತ್ರ ಬರೆದಿದ್ದಾರೆ. ಈ ಎಲ್ಲ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಈ ವಿಚಾರದಲ್ಲಿ ತೆಗೆದುಕೊಳ್ಳಬೇಕಾದ ನಿಲುವು ಹಾಗೂ ಸಾಧಕ ಬಾಧಕಗಳ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು. ಇದುವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಸಂವಿಧಾನಾತ್ಮಕವಾಗಿ ಹಿಂದುಳಿದ ವರ್ಗಗಳಿಗೆ ಕಾನೂನು ರೀತ್ಯ ಪ್ರಾತಿನಿಧ್ಯ ನೀಡಲಾಗುತ್ತಿದೆ ಎಂದರು.

ಹಿಂದುಳಿದ ವರ್ಗಗಳ ರಾಜಕೀಯ ಪ್ರಾತಿನಿಧ್ಯ ನೀಡಿಯೇ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮಾಡಬೇಕೆಂಬುದು ಸರ್ಕಾರ ಹಾಗೂ ಎಲ್ಲ ಪಕ್ಷಗಳ ಅಭಿಪ್ರಾಯವಾಗಿದ್ದು, ಈ ನಿಟ್ಟಿನಲ್ಲಿ ಚುನಾವಣೆ ಪ್ರಕ್ರಿಯೆಗಳ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು‌ ಅವರು ಹೇಳಿದರು.

ಓಬಿಸಿ ಪರಿಗಣಿಸುವ ಪ್ರಕ್ರಿಯೆ ಸಮಯ ತೆಗೆದುಕೊಳ್ಳಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ ಮದ್ಯಪ್ರದೇಶ ರಾಜ್ಯದವರು ಒಂದು ಆಯೋಗವನ್ನು ರಚಿಸಿ ವರದಿ ತರಿಸಿ ಸರ್ವೋಚ್ಛ ನ್ಯಾಯಾಲಯಕ್ಕೆ ನೀಡಿತ್ತು. ಈ ಸಂದರ್ಭದಲ್ಲಿ ಬಂದ ತೀರ್ಪಿನ ಬಗ್ಗೆ ರಿವ್ಯೂ ಪಿಟಿಷನ್ ಹಾಕಿಕೊಂಡಿದ್ದಾರೆ. ರಾಜ್ಯದಲ್ಲಿ ಮೀಸಲಾತಿ ಬಗ್ಗೆ ಹಲವಾರು ವರದಿಗಳಿದ್ದು, ಅವುಗಳನ್ನು ಬಳಸಿಕೊಳ್ಳುವ ಬಗ್ಗೆಯೂ ಚಿಂತನೆ ನಡೆಯುತ್ತಿದೆ ಎಂದರು.

ಸುಪ್ರೀಂ ಕೋರ್ಟ್‍ನ ಸೂಚನೆಯಂತೆ ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿಯ ಬಗ್ಗೆ ನಿಖರವಾದ ಅಂಕಿಅಂಶಗಳುಳ್ಳ ವರದಿಯನ್ನು ಸಿದ್ಧಪಡಿಸಲು ಆಯೋಗವನ್ನು ರಚಿಸಲಾಗಿದೆ. ಯಾವೆಲ್ಲ ಸಮುದಾಯಗಳಿಗೆ ಎಷ್ಟು ರಾಜಕೀಯ ಪ್ರಾತಿನಿಧ್ಯ ದೊರಕುತ್ತಿದೆ ಎಂಬ ನಿಖರ ಅಂಕಿಅಂಶಗಳ ಆಧಾರದ ಮೇಲೆ ಹಿಂದುಳಿದ ವರ್ಗಗಳ ಮೀಸಲಾತಿ ನೀಡುವ ಬಗ್ಗೆ ಸುಪ್ರೀಂಕೋರ್ಟಿಗೆ ವರದಿ ಸಲ್ಲಿಸಲಾಗುತ್ತದೆ. ಹಿಂದಿನ ಸುಪ್ರೀಂ ಕೋರ್ಟ್ ಆದೇಶವನ್ನು ಈಗಾಗಲೇ ಪಾಲಿಸಲಾಗುತ್ತಿದೆ. ಪ್ರಸ್ತುತ ಇನ್ನೊಂದು ಆದೇಶ ಬಂದಿದೆ. ಇದರ ಪರಿಣಾಮಗಳ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಲಾಗುವುದು ಎಂದರು.

ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

Related posts

ಮುಂಗಾರು ಮಳೆ ಬೇಗ ಬರುತ್ತೆ ; ಹವಾಮಾನ ಇಲಾಖೆ

eNewsLand Team

ವಿಪ ಕದನ; ಸಂತೆ, ಜಾತ್ರೆ, ಉತ್ಸವ ನಿಷೇಧಿಸಿದ ಜಿಲ್ಲಾಧಿಕಾರಿ ಹೆಗಡೆ

eNewsLand Team

ಕುಗ್ರಾಮದ ಮಹದೇವಗೆ ರಾಜ್ಯೋತ್ಸವ ಪ್ರಶಸ್ತಿ

eNEWS LAND Team